
ಉಡುಪಿ: ನಗರದ ನಿಟ್ಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಕ್ಟೋಬರ್ 26ರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹ ಸವಾರೆಯೊಬ್ಬರು ಮೃತಪಟ್ಟು, ಅವರ ತಾಯಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.ಶಿರ್ವ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಸುದೇಶ್ ಶೆಟ್ಟಿ ಅವರ ಪುತ್ರಿ ಸ್ಪರ್ಷ (24) ಮೃತ ದುರ್ದೈವಿ. ಸ್ಪರ್ಷ ಅವರ ತಾಯಿ ಶರ್ಮಿಳಾ (49) ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ವಿವರ:ಅ.26ರಂದು ರಾತ್ರಿ ಕೆಎಸ್ಆರ್ಟಿಸಿ ಡಿಪ್ಪೋ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಅಪಘಾತ ಸಂಭವಿಸಿದೆ. ಮೃತ ಸ್ಪರ್ಷ ಮತ್ತು ಅವರ ತಾಯಿ ಶರ್ಮಿಳಾ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕರಾವಳಿ ಬೈಪಾಸ್ನಿಂದ ಸಂತೆಕಟ್ಟೆ ಕಡೆಗೆ ಅತಿವೇಗದಲ್ಲಿ ಸಾಗುತ್ತಿದ್ದ ಕಾರು, ಸ್ಕೂಟರ್ಗೆ ಹಿಂದಿನಿಂದ ಬಲವಾಗಿ ಢಿಕ್ಕಿ ಹೊಡೆದಿದೆ.
ಢಿಕ್ಕಿಯ ರಭಸಕ್ಕೆ ಇಬ್ಬರು ಸಹ ಸವಾರರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಗಾಯಗೊಂಡ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಸ್ಪರ್ಷ ಅವರು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ತಾಯಿ ಶರ್ಮಿಳಾ ಅವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.ಈ ಸಂಬಂಧ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
