

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಗುತ್ತಿಗೆದಾರರು ಅಥವಾ ಅಭಿಯಂತರ ನಿರ್ಲಕ್ಷ್ಯದಿಂದ ರಸ್ತೆ ಅಪಘಾತಗಳು ಸಂಭವಿಸಿದಲ್ಲಿ ಸಂಬಂಧ ಪಟ್ಟ ಅಭಿಯಂತರರ ವಿರುದ್ಧವೂ ಕ್ರಿಮಿನಲ್ ಕೇಸ್‌ಗಳನ್ನು ಹಾಕುವಂತೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಪೊಲೀಸ್ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಉಡುಪಿ ಹೊರವಲಯದ ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಬಳಿಕ ಅವರು ಮಾತನಾಡುತ್ತಿದ್ದರು. ಕಾಮಗಾರಿಯ ವೇಳೆ ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಆಗದಂತೆ ಬದಲಿ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.