

ಉಡುಪಿ: ಗ್ಯಾರಂಟಿ ನೆಪದಲ್ಲಿ ಅಧಿಕಾರದ ಗದ್ದುಗೆಯೇರಿರುವ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ದಲಿತರ ಹಣವನ್ನು ಲೂಟಿ ಮಾಡುತ್ತಿದೆ. ಭ್ರಷ್ಟಾಚಾರದ ಕೂಪವಾಗಿ ಸರ್ಕಾರ ಏರ್ಪಟ್ಟಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆಯು ಎಪ್ರಿಲ್ ಹತ್ತು( ನಾಳೆ) ಉಡುಪಿಗೆ ಆಗಮಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ನಾಳೆ ಬೆಳಿಗ್ಗೆ ಶ್ರೀಕೃಷ್ಣ ಮಠದ ರಾಜಾಂಗಣದ ಪಾರ್ಕಿಂಗ್ ಪ್ರದೇಶದಲ್ಲಿ ಬಿ.ವೈ ವಿಜಯೇಂದ್ರ ಅವರು ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಆ ಬಳಿಕ ಕಡಿಯಾಳಿ, ಕಲ್ಸಂಕ ಮಾರ್ಗವಾಗಿ ಬಿಜೆಪಿ ಕಚೇರಿಯ ಹಿಂಭಾಗದ ಮೈದಾನದವರೆಗೆ ಪ್ರತಿಭಟನಾ ಜಾಥಾ ಸಾಗಿ ಬರಲಿದೆ. ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಯಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.