ಮಂಗಳೂರು: ಕೋಟ ಶ್ರೀನಿವಾಸ್ ಪೂಜಾರಿ ಅವರು ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿರುವುದರಿಂದ ಕೋಟರಿಂದ ವಿಧಾನ ಪರಿಷತ್ ಸ್ಥಾನ ತೆರವಾಗಲಿದೆ. ಹೀಗಾಗಿ ಈ ಕ್ಷೇತ್ರದ ಉಪಚುನಾವಣೆಯು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನು ಒಳಗೊಂಡ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ದ್ವಿಸದಸ್ಯರನ್ನು ಒಳಗೊಂಡಿದೆ. 2021ರ ಡಿಸೆಂಬರ್‌ನಲ್ಲಿ ಚುನಾವಣೆಯಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್‌ನಿಂದ ಮಂಜುನಾಥ ಭಂಡಾರಿ ಆಯ್ಕೆಯಾಗಿದ್ದರು. ವಿಧಾನ ಪರಿಷತ್ ಸದಸ್ಯರ ಅವಧಿ 6 ವರ್ಷ ಆಗಿರುವುದರಿಂದ ಕೋಟ ಶ್ರೀನಿವಾಸ್ ಪೂಜಾರಿ ಅವರ ವಿಧಾನ ಪರಿಷತ್ ಅವಧಿ ಇನ್ನೂ ಮೂರುವರೆ ವರ್ಷ ಇದೆ.
ಕೋಟ ಶ್ರೀನಿವಾಸ್ ಪೂಜಾರಿಯವರಿಂದ ತೆರವಾಗುವ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾದರೆ, ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಹಾಗೂ ವಿಧಾನ ಪರಿಷತ್ ಉಪ ಚುನಾವಣೆಗೂ ಮುನ್ನವೇ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಬಹುದು ಎನ್ನಲಾಗುತ್ತಿದೆ.
ಇನ್ನು ಕೋಟರಿಂದ ತೆರವಾಗುವ ಪರಿಷತ್ ಸ್ಥಾನವನ್ನು ಸಿ.ಟಿ. ರವಿ ಅವರಿಗೆ ನೀಡುವ ಬಗ್ಗೆ ಬಿಜೆಪಿಯಲ್ಲಿ ನಡೆದಿದೆ ಎನ್ನಲಾಗುತ್ತಿದೆ. ಜೊತೆಗೆ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಸ್ಥಾನವನ್ನು ನೀಡಬೇಕೆಂಬ ಬೇಡಿಕೆಯೂ ಇದೆ ಎಂದು ಹೇಳಲಾಗುತ್ತಿದೆ.