
ಮಂಗಳೂರು: ಮಂಗಳೂರು ನಗರದಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಪಂಪ್ವೆಲ್–ಎಕ್ಕೂರು ಪರಿಸರದಲ್ಲಿ ಆಟೋ ರಿಕ್ಷಾದ ಮೂಲಕ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ, ಸಿಸಿಬಿ ಪೊಲೀಸರು ಮಾರ್ಚ್ 22ರಂದು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು.
ಬಂಧಿತರನ್ನು ಹೈದರ್ @ ಹೈದರ್ ಆಲಿ (53), ಮೊಹಮ್ಮದ್ ಸಜಾದ್ (29) ಹಾಗೂ ಜೈಸನ್ ಮೆನೆಜಸ್ (26) ಎಂದು ಗುರುತಿಸಲಾಗಿದೆ.
ಆರೋಪಿಗಳ ವಶದಿಂದ ರೂ.2,50,000 ಮೌಲ್ಯದ 26 ಗ್ರಾಂ ಎಂಡಿಎಂಎ ಮಾದಕ ವಸ್ತು, ರೂ.37,000 ನಗದು, 5 ಮೊಬೈಲ್ ಫೋನ್ಗಳು, ತೂಕಮಾಪನ ಯಂತ್ರ ಹಾಗೂ KA-19-AC-2245 ಸಂಖ್ಯೆಯ ಆಟೋ ರಿಕ್ಷಾ ಸೇರಿದಂತೆ ಒಟ್ಟು ರೂ.4,37,500 ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಪ್ರಮುಖ ಆರೋಪಿಯಾದ ಹೈದರ್ ಅಲಿ ವಿರುದ್ಧ ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ಹಾಗೂ 2024ರಲ್ಲಿ ಮಾದಕ ವಸ್ತು ಮಾರಾಟದ ಪ್ರಕರಣ ದಾಖಲಾಗಿರುವುದಲ್ಲದೆ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ಮಾಡಿದ ಪ್ರಕರಣವೂ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
