ಉಡುಪಿ: ಖಾಸಗಿ ಬಸ್ ವೊಂದು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ ಪಾದಚಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಸಾವನ್ನಪ್ಪಿದ ವ್ಯಕ್ತಿ ಬ್ಯಾಂಡ್ ವಾದಕ ಕಟಪಾಡಿ ತೇಕಲತೋಟದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕುಮಾರ್ (55) ಎಂದು ತಿಳಿದು ಬಂದಿದೆ.
ಪಾದಚಾರಿಗೆ ಡಿಕ್ಕಿ ಹೊಡೆದ ಬಳಿಕ ನಿಯಂತ್ರಣ ಕಳೆದುಕೊಂಡ ಬಸ್ ಡಿವೈಡರ್ ಮೇಲೆ ಏರಿ ನಿಂತಿದೆ. ಘಟನೆಯಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.