ಕುಂದಾಪುರ: ಬೈಂದೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಅವರು ಉಡುಪಿ ಜಿಲ್ಲಾಡಳಿತ ವತಿಯಿಂದ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯ ನಗು ಸಿಟಿಯಲ್ಲಿ ಮನೆ ಮನೆಗೆ ಕುಡಿಯುವ ನೀರು, ಮರವಂತೆ ಮೀನುಗಾರಿಕೆ ಬಂದರು, ಏತ ನೀರಾವರಿ ಯೋಜನೆ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಾಣ, ಗಂಗೊಳ್ಳಿ ಬಂದರು ಅಭಿವೃದ್ಧಿಗೆ 100 ಕೋಟಿಯ ಅನುದಾನ ಬಿಡುಗಡೆ, ಕೊಡಚಾದ್ರಿಗೆ ರೋಪ್ ವೇ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶ ಇರುವುದರಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅನುದಾನ ಬಿಡುಗಡೆ, ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ 2 ಕೋಟಿಗಳ ಅನುದಾನ, ಮೆಡಿಕಲ್ ಕಾಲೇಜು ಸ್ಥಾಪನೆ, ವಿಮಾನ ನಿಲ್ದಾಣ ರಚನೆ ಹಾಗೂ 94ಸಿ ಹಾಗೂ 94ಸಿಸಿ ಅಡಿ ಅರ್ಜಿ ಹಾಕಿದ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲು ಸರಕಾರ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.