ಹೊಸ ರೇಷನ್ ಕಾರ್ಡ್‌ಗಾಗಿ ಕಾಯುತ್ತಿದ್ದವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆರೋಗ್ಯ ತುರ್ತು ಕಾರಣಕ್ಕೆ 744 ಜನರಿಗೆ ಬಿಪಿಎಲ್ ಕಾರ್ಡ್ ಕೊಡಲಾಗಿದೆ. ಆರೋಗ್ಯ ಚಿಕಿತ್ಸೆಗಾಗಿ ಅರ್ಜಿ ಸಲ್ಲಿಸಿದವರಿಗೆ ಮಾತ್ರ ತಕ್ಷಣ ಕಾರ್ಡ್ ವಿತರಣೆ ಮಾಡಲಾಗುತ್ತಿದೆ ಎಂದಿದ್ದಾರೆ.
ಹೊಸ ಪಡಿತರ ಚೀಟಿಗಾಗಿ ಸಲ್ಲಿಸಿದ 2.95 ಲಕ್ಷ ಅರ್ಜಿ ಇನ್ನೂ ಬಾಕಿ ಇವೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಸ್ಥಗಿತವಾಗಿತ್ತು. ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗೂ 57 ಸಾವಿರ ಹೊಸ ಕಾರ್ಡ್‌ಗಳನ್ನು ವಿತರಿಸಿದೆ. ಏಪ್ರಿಲ್ ಒಂದರಿಂದ ಹೊಸ ರೇಷನ್ ಕಾರ್ಡ್ ವಿತರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಲಾಭ ಪಡೆಯವವರು ರೇಷನ್ ಕಾರ್ಡ್ ಹೊಂದಿರಲೇಬೇಕು. ಹೀಗಾಗಿ ರೇಷನ್ ಕಾರ್ಡ್ ಇಲ್ಲದವರು ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಲಾಭ ಸಿಗದೆ ಪರದಾಡುತ್ತಿದ್ದಾರೆ.ರಾಜ್ಯದ ಜನರು ಹೊಸ ಕಾರ್ಡ್ ವಿತರಣೆ ಮಾಡಿ ಅಂತ ಹಲವು ತಿಂಗಳಿನಿಂದ ಬೇಡಿಕೆ ಇಡುತ್ತಿದ್ದಾರೆ. ಹೊಸ ಕಾರ್ಡ್‌ಗಾಗಿ ಅರ್ಜಿ ಸಲ್ಲಿಕೆ ಮಾಡುವುದು ಕಳೆದ ಒಂದು ವರ್ಷದಿಂದ ಸ್ಥಗಿತವಾಗಿತ್ತು. ಹೀಗಾಗಿ ಮೊದಲು ಬಾಕಿ ಇರುವ 2.95 ಲಕ್ಷ ಅರ್ಜಿಯನ್ನು ವಿತರಣೆ ಮಾಡಲಾಗುತ್ತೆ. ಹೊಸ ಕಾರ್ಡ್ ವಿತರಣೆ ನಂತರ ಹೊಸ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುವುದು ಎಂದು ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ.