ಉಡುಪಿ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದು ಹೇಳಿದ ಕೂಡಲೇ ಹಿಂದೂ ಕಾರ್ಯಕರ್ತರನ್ನು ಬೇದರಿಸಿ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಇದು ಸಚಿವರಿಗೆ ಶೋಭೆ ತರುವದಿಲ್ಲ ಎಂದು ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಐದಾರು ಬಾರಿ ಪ್ರವಾಸ ಮಾಡಿದ್ದು ಉತ್ತಮ ಸ್ಪಂದನ ವ್ಯಕ್ತವಾಗಿದ್ದು ಇಲ್ಲಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು. ಹಿಂದುತ್ವದ ಆಧಾರದ ಗೆದ್ದ ಬಿಜೆಪಿ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಕಡೆಗಣಿಸಿದೆ. ಮೂರು ಸಾವಿರ ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮುಂಬರುವ ಚುನಾವಣೆಯಲ್ಲಿ ಅಕ್ರೋಷಿತ ಕಾರ್ಯಕರ್ತರೇ ಬಿಜೆಪಿಯನ್ನು ಸೋಲಿಸಲಿದ್ದಾರೆ ಎಂದರು.ಕಾರ್ಕಳ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿ ಅಡ್ಡಿಪಡಿಸಿದರೆ ಎಲ್ಲ ಕ್ಷೇತ್ರಗಳಲ್ಲಿ ಹಿಂದೂ ಒಕ್ಕೂಟ ಬಿಜೆಪಿ ವಿರುದ್ಧವಾಗಿ ಕೆಲಸ ಮಾಡಲಿದೆ. ಕಾರ್ಕಳದಲ್ಲಿ ಹಿಂದೂ ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ನಿಲ್ಲಿಸದಿದ್ದರೆ ಡಿ.20ರಂದು ರಾಜ್ಯದಾದ್ಯಂತ ಶ್ರೀರಾಮಸೇನೆ ಹಾಗೂ ಹಿಂದೂ ಒಕ್ಕೂಟದಿಂದ ಪ್ರತಿಭಟನೆ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು.