ಬೆಂಗಳೂರು : ಚೀನಾ ಸೇರಿ ಹಲವು ದೇಶಗಳಲ್ಲಿ ಕೊರೊನಾ ಕಾರ್ಮೋಡ ಆವರಿಸಿದ್ದು, ಇದರಿಂದ ಕರ್ನಾಟಕದಲ್ಲೂ ಆತಂಕ ಶುರುವಾಗಿದೆ. ಈಗಾಗಲೇ ಸರ್ಕಾರ ಕೊರೊನಾ ಕಟ್ಟಿ ಹಾಕಲು ಹಲವು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಮಾರ್ಗಸೂಚಿ ಕೂಡ ಪ್ರಕಟವಾಗಿದ್ದು, ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ.
ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಇಂದು ಮತ್ತೊಂದು ತುರ್ತು ಸಭೆ ನಡೆಸಲಿದೆ ಎಂದು ಸುವರ್ಣಸೌಧದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದಾರೆ. ಕೊರೊನಾ ನಿರ್ವಹಣೆ ಸಂಬಂಧ ಶನಿವಾರ ರಾಜ್ಯದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಚಿವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ಸಚಿವ ಅಶೋಕ್ ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಕೊರೊನಾ ನಿರ್ವಹಣೆ ಸಂಬಂಧ ಮತ್ತಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಕೊವಿಡ್ ಮಾರ್ಗಸೂಚಿ ಪಾಲಿಸುವಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮೀಟಿಂಗ್ ನಡೆದಿದೆ. ಈ ಸಭೆಯಲ್ಲಿ ಹೊಸ ವರ್ಷಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಪಶ್ಚಿಮ ವಿಭಾಗದ ಹಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಮಣೇಶ್ವರ ರಾವ್, ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಸಭೆಯಲ್ಲಿ ಭಾಗಿಯಾಗಿದ್ದರು.