

ಬೆಂಗಳೂರು: ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ.
ಈ ಮೂರು ಜಿಲ್ಲೆಗಳಿಗೆ ಗುರುವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆಯಿದೆ. ಕರಾವಳಿಯಲ್ಲಿ 40-45 ಕಿ.ಮೀ.ಯಿಂದ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹೇಳಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಒಂದೆರಡು ಸಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಬುಧವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ಮಳೆಯಾಗಿದೆ. ದಕ್ಷಿಣ ಕನ್ನಡದ ಮುಲ್ಕಿಯಲ್ಲಿ ಗರಿಷ್ಠ (19 ಸೆಂ.ಮೀ) ಮಳೆಯಾಗಿದೆ. ಉತ್ತರ ಕನ್ನಡದ ಕಾರವಾರದಲ್ಲಿ 16 ಸೆಂ.ಮೀ, ದಕ್ಷಿಣ ಕನ್ನಡದ ಪಣಂಬೂರಿನಲ್ಲಿ 15 ಸೆಂ.ಮೀ, ಮಂಗಳೂರು ವಿಮಾನ ನಿಲ್ದಾಣದಲ್ಲಿ 14 ಸೆಂ.ಮೀ, ಮಂಗಳೂರಿನಲ್ಲಿ 13 ಸೆಂ.ಮೀ, ಉತ್ತರ ಕನ್ನಡದ ಮಂಕಿ ಹಾಗೂ ಬೇಲೆಕೇರಿಯಲ್ಲಿ ತಲಾ 12 ಸೆಂ.ಮೀ ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.