

ಉಡುಪಿ: ಸರಕಾರದ ಆದೇಶದಂತೆ ಸ್ಥಳೀಯ ಪ್ರಾಧಿಕಾರ, ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಗಳಿಂದ ಅನುಮತಿ ಪಡೆದು ಕಾರ್ಯ ನಿರ್ವಹಿಸುತ್ತಿರುವ ವಾಣಿಜ್ಯ ಕಟ್ಟಡ, ಕೈಗಾರಿಕೆ, ಆಸ್ಪತ್ರೆ, ಪ್ರಯೋಗಾಲಯಗಳು, ಹೋಟೆಲ್ ಸೇರಿದಂತೆ ಎಲ್ಲಾ ವಾಣಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡದ ಭಾಷೆಯ ಬಳಕೆ ಕಡ್ಡಾಯವಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ಅಧಿಕೃತ ಭಾಷೆಯ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಮತ್ತು ತಿದ್ದುಪಡಿ ವಿಧೇಯಕ ಅನುಸಾರ ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರ ಮತ್ತು ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಸುತ್ತಿರುವ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರ, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮಳಿಗೆಗಳು, ಬ್ಯಾಂಕ್‌ಗಳು, ಕೈಗಾರಿಕೆ ಗಳು, ಶಿಕ್ಷಣ ಸಂಸ್ಥೆಗಳು, ಹೋಟೆಲ್‌ಗಳು ಹಾಗೂ ಎಲ್ಲ ಖಾಸಗಿ ಸಂಸ್ಥೆಗಳು, ಮನರಂಜನಾ ಕೇಂದ್ರಗಳು, ಹೋಟೆಲ್‌ಗಳು ಒಳಗೊಂಡಂತೆ 230 ಸಂಸ್ಥೆಗಳು ಅಳವಡಿಸಿರುವ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ನಿಗದಿತ ಪ್ರಮಾಣದಲ್ಲಿ ಪ್ರದರ್ಶಿಸಲಾಗಿದೆ ಮತ್ತು ನಾಮಫಲಕ ದಲ್ಲಿ ಕನ್ನಡ ಭಾಷೆಯು ಮೇಲ್ಭಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಪರಿಶೀಲಿಸಿ ಖಚಿತ ಪಡಿಸಿಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.