ಉಡುಪಿ : ಲೋಕಸಭಾ ಸಾರ್ವತ್ರಿಕ ಚುನಾವಣೆಯ ಜೂನ್ 4 ರಂದು ಮತ ಎಣಿಕೆ- ನಿಷೇಧಾಜ್ಞೆ ಜಾರಿ..!

ಉಡುಪಿ : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ 15-ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನದ ಮತ ಎಣಿಕೆ ಕಾರ್ಯವು ಜೂನ್ 4 ರಂದು ನಗರದ ಬ್ರಹ್ಮಗಿರಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ.

ಮತ ಎಣಿಕೆ ಕಾರ್ಯವನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಮತ್ತು ಮತ ಎಣಿಕೆಯ ನಂತರ ಫಲಿತಾಂಶ ಪ್ರಕಟಣೆಗೊಂಡು, ಫಲಿತಾಂಶದ ಪ್ರಭಾವದಿಂದ ಗೆಲುವು ಸಾಧಿಸಿದ ಅಭ್ಯರ್ಥಿಗಳು ಮತ್ತು ಬೆಂಬಲಿಗರು, ಗುಂಪು ಗುಂಪಾಗಿ ಸೇರಿ ಮೆರವಣಿಗೆ/ ವಿಜಯೋತ್ಸವಗಳನ್ನು ಆಚರಿಸಲು ಅವಕಾಶ ನೀಡಿದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆಗಳಿರುವ ಹಿನ್ನೆಲೆ, ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು, ನಂತರ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಂಡು ಶಾಂತಿಯನ್ನು ಕಾಪಾಡುವ ಸಲುವಾಗಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 144 (1) ರ ಅನ್ವಯ ಜಿಲ್ಲೆಯಾದ್ಯಂತ ಜೂನ್ 4 ರಂದು ಬೆಳಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 12 ರ ವರೆಗೆ ಈ ಕೆಳಗಿನಂತೆ ಷರತ್ತುಗಳನ್ನು ವಿಧಿಸಿ, ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗುವುದನ್ನು ಹಾಗೂ ಮೆರವಣಿಗೆ, ಸಭೆ ಸಮಾರಂಭ ಜರುಗಿಸುವುದನ್ನು ನಿಷೇದಿಸಲಾಗಿರುತ್ತದೆ. ಮತ ಎಣಿಕೆ ಕೇಂದ್ರದ ಆವರಣದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ಪಾದಚಾರಿ ವಲಯ ಎಂದು ಗುರುತಿಸಲಾಗುತ್ತದೆ. ಈ ಸಂದರ್ಭದಲ್ಲಿ ಯಾವುದೇ ವಾಹನಗಳಿಗೆ ಪ್ರವೇಶ ಮತ್ತು ಪಾರ್ಕಿಂಗ್ ಮಾಡಲು ಅವಕಾಶ ಇರುವುದಿಲ್ಲ. ಮತ ಎಣಿಕೆ ಕೇಂದ್ರದ 100 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡ್ಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿರುತ್ತದೆ. (ಮುಖ್ಯ ಚುನಾವಣಾಧಿಕಾರಿ, ಮುಖ್ಯ ಚುನಾವಣಾಧಿಕಾರಿಯವರ ಕಛೇರಿ ಬೆಂಗಳೂರು ಇವರಿಂದ ಅನುಮತಿ ಪಡೆದ ಚುನಾವಣಾ ಕಾರ್ಯನಿರತ ಅಧಿಕಾರಿಗಳು/ ಸಿಬ್ಬಂದಿಗಳು ಹೊರತುಪಡಿಸಿ) ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವ, ಕರಾಳೋತ್ಸವ, ಪ್ರತಿಭಟನಾ ಮೆರವಣಿಗೆ ಹಾಗೂ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸಭೆ, ಸಮಾರಂಭಗಳನ್ನು ಹಾಗೂ ಯಾವುದೇ ರೀತಿಯ ಘೋಷಣೆ ಕೂಗುವುದನ್ನು ಹಾಗೂ ಚುನಾವಣೆಯ ಮತ ಎಣಿಕೆ ಫಲಿತಾಂಶದ ವಿಜಯೋತ್ಸವದ ಸಮಯದಲ್ಲಿ ಪಟಾಕಿ/ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿರುತ್ತದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.

ಈ ಅವಧಿಯಲ್ಲಿ ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಗಧೆ, ಕೋಲು, ಚೂರಿ, ದೊಡ್ಡ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಗೆ ಕಾರಣವಾಗುವ ಅಥವಾ ಮಾರಕವಾಗುವ ಇನ್ನಾವುದೇ ವಸ್ತುಗಳನ್ನು ಧರಿಸುವುದನ್ನು ಮತ್ತು ಯಾವುದೇ ಕ್ಷಾರಕ ಯಾ ಸ್ಫೋಟಕ ವಸ್ತುಗಳು, ಪಟಾಕಿ, ಸಿಡಿಮದ್ದು ಹೊಂದುವುದನ್ನು ನಿಷೇಧಿಸಲಾಗಿರುತ್ತದೆ.

ಯಾವುದೇ ಸಾರ್ವಜನಿಕ ಪ್ರದೇಶದಲ್ಲಿ ಕಲ್ಲುಗಳನ್ನು ಒಟ್ಟುಗೂಡಿಸುವುದು, ಕ್ಷಿಪಣಿಗಳು ಅಥವಾ ಕ್ಷಿಪಣಿಯಾಗಿ ಉಪಯೋಗಿಸಲ್ಪಡುವ ಇತರ ಆಯುಧಗಳು ಮತ್ತು ಸಾಧನ ಸಾಮಾಗ್ರಿಗಳನ್ನು ಧರಿಸುವುದನ್ನು ನಿಷೇಧಿಸಲಾಗಿರುತ್ತದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿರುತ್ತದೆ. ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇದ್ದು, ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು.
ಈ ಆದೇಶಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನಿನ್ವಯ ಕ್ರಮ ಕೈಗೊಳ್ಳುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Check Also

ಪುತ್ತೂರು: ತಾಳಿಯನ್ನು ಮನೆಯಲ್ಲಿಟ್ಟು ವಿವಾಹಿತೆ ನಾಪತ್ತೆ..!

ಪುತ್ತೂರು: ಪುತ್ತೂರು ಸಮೀಪ ತಾಳಿಯನ್ನು ಮನೆಯಲ್ಲಿಟ್ಟು ವಿವಾಹಿತೆ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸರ್ವೆ …

Leave a Reply

Your email address will not be published. Required fields are marked *

You cannot copy content of this page.