ಉಡುಪಿ ನೇಜಾರು ಹತ್ಯಾಕಾಂಡ ಪ್ರಕರಣ: ಕೋರ್ಟ್‌ನಲ್ಲಿ ಕೊಲೆ ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ

ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆ ಅವರು ತನ್ನ ಮೇಲಿನ ಆರೋಪವನ್ನು ನ್ಯಾಯಾಲಯದಲ್ಲಿ ನಿರಾಕರಿಸಿರುವ ಬಗ್ಗೆ ವರದಿಯಾಗಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಪ್ರಕರಣದ ತನಿಖಾಧಿಕಾರಿ ಯಾಗಿರುವ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಕೃಷ್ಣ ಎಸ್.ಕೆ. ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಈ ವೇಳೆ ನ್ಯಾಯಾಧೀಶರಾದ ದಿನೇಶ್ ಹೆಗ್ಡೆ ಆರೋಪಿ ಮೇಲಿನ ಆಪಾದನೆಯನ್ನು ವಾಚಿಸಿದರು.
ಆದರೆ ಚೌಗುಲೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿ ತನ್ನ ಮೇಲಿನ ಆರೋಪವನ್ನು ನಿರಾಕರಿಸಿ, ವಿಚಾರಣೆ ಎದುರಿಸುವುದಾಗಿ ತಿಳಿಸಿದನು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಈ ಗಂಭೀರ ಪ್ರಕರಣದ ವಿಚಾರಣೆಗೆ ಪೂರ್ವಭಾವಿಯಾಗಿ ಎ.5ರಂದು ಪ್ರಿ ಟ್ರಾಯಲ್ ಕಾನ್ಫರೆನ್ಸ್ ನಡೆಸಲು ಆದೇಶ ನೀಡಿದರು. ನ್ಯಾಯಾಧೀಶರ ಸಮಕ್ಷಮದಲ್ಲಿ ನಡೆಯುವ ಈ ಕಾನ್ಪರೆನ್ಸ್‌ನಲ್ಲಿ ಪ್ರಕರಣದ ತನಿಖಾಧಿಕಾರಿ, ವಿಶೇಷ ಪಿಪಿ, ಆರೋಪಿ ಪರ ವಕೀಲರು ಭಾಗವಹಿಸಿ, ಮುಂದಿನ ವಿಚಾರಣೆ ಯಾವ ರೀತಿ ನಡೆಸಬೇಕೆಂಬುದರ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಯಾವ ವಿಚಾರಣೆ ಅಗತ್ಯ ಇದೆ ಎಂಬುದರ ಬಗ್ಗೆ ಈ ಸಭೆಯಲ್ಲಿ ತೀರ್ಮಾನಿಸಿ, ವಿಚಾರಣೆ ಆರಂಭಿಸಲು ಸಾಕ್ಷಿಗಳಿಗೆ ಸಮನ್ಸ್ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಬಳಿಕ ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಎ.5ರವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶ ನೀಡಿದೆ. ಈ ಸಂದರ್ಭದಲ್ಲಿ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವ ಪ್ರಸಾದ್ ಆಳ್ವ ಹಾಜರಿದ್ದರು. ಕೋರ್ಟ್ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಭದ್ರತೆ ಉಸ್ತುವಾರಿಯನ್ನು ಪ್ರಭು ಡಿ.ಟಿ. ವಹಿಸಿದ್ದರು. ಬಳಿಕ ಆರೋಪಿ ಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿನ ಜೈಲಿಗೆ ಕರೆದೊಯ್ಯಲಾಯಿತು.
2023ರ ನ.12ರಂದು ಆರೋಪಿ ಪ್ರವೀಣ್ ಚೌಗುಲೆ ನೇಜಾರು ತೃಪ್ತಿ ಲೇಔಟ್‌ನ ಹಸೀನಾ ಹಾಗೂ ಅವರ ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದನು. ಆತನನ್ನು ಪೊಲೀಸರು ನ.14ರಂದು ಬೆಳಗಾವಿ ಬಂಧಿಸಿದ್ದರು.

Check Also

ಕುಂದಾಪುರ: ಇನ್ನೋವಾ ಕಾರು ಮರಕ್ಕೆ ಡಿಕ್ಕಿಯಾಗಿ ಯುವತಿ ಸಾವು ,ನಾಲ್ವರಿಗೆ ಗಾಯ

ಕುಂದಾಪುರ: ಇಲ್ಲಿನ ತೆಕ್ಕಟ್ಟೆ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ …

Leave a Reply

Your email address will not be published. Required fields are marked *

You cannot copy content of this page.