

ಕೊಪ್ಪಳ, ಮಾರ್ಚ್ 30; ಕರ್ನಾಟಕ ವಿಧಾನಸಭೆ ಚುನಾವಣೆ 2023ರ ವೇಳಾಪಟ್ಟಿ ಪ್ರಕಟವಾಗಿದೆ. ರಾಜ್ಯದಲ್ಲಿ ತಕ್ಷಣದಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ರಾಜ್ಯದ 224 ಕ್ಷೇತ್ರಗಳಿಗೆ ಮೇ 10ರ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರ ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಪತ್ರಿಕಾಗೋಷ್ಠಿ ನಡೆಸಿದರು. ಕೊಪ್ಪಳ ಜಿಲ್ಲೆಯಲ್ಲಿ 5 ವಿಧಾನಸಭಾ ಕ್ಷೇತ್ರಗಳಿವೆ. ಮಾರ್ಚ್ 29ರ ಬೆಳಗ್ಗೆ 11.30 ರಿಂದ ಅನ್ವಯವಾಗುವಂತೆ ಮಾದರಿ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ. ಮಾದರಿ ನೀತಿ ಸಂಹಿತೆ ಅನುಷ್ಠಾನಗೊಳಿಸಲು ಜಿಲ್ಲಾಮಟ್ಟದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಮತ್ತು ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಆಯಾ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದರು.