April 19, 2026
saliyath

ಪಡಂಗಡಿ, ಮೇ 31: ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೆ ವಿದ್ಯಾರ್ಥಿ, ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಪ್ರಸ್ತುತ ವಿವಾಹವಾಗಿ ಚಿಕ್ಕಮಗಳೂರು ಪತಿ ಮನೆಯಲ್ಲಿ ವಾಸವಾಗಿರುವ ಸಾಲಿಯತ್ (24) ಹೃದಯಾಘಾತದಿಂದ ಇಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆಯುತ್ತಿರುವಾಗ ಕ್ರೀಡಾ ಕ್ಷೇತ್ರದಲ್ಲಿ ಅತ್ಯಧಿಕ ಸಾಧನೆ ತೋರಿದ್ದರು.

ಹೈದರ್ ಪಡಂಗಡಿ ಅವರ ಗರಡಿಯಲ್ಲಿ ಆರಂಭದ ತರಬೇತಿಯನ್ನು ಪಡೆದವರು. ಮುಂದೆ ಪ್ರೌಢ ಶಿಕ್ಷಣವನ್ನು ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಪಡೆಯುತ್ತಿದ್ದ ಸಂದರ್ಭದಲ್ಲಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತರುವಲ್ಲಿ ಇವರ ಕೊಡುಗೆ ಅಪಾರವಾಗಿತ್ತು.

ಮುಂದೆ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಎಸ್.ಡಿ.ಎಂ. ಕಾಲೇಜು ಉಜಿರೆಯಲ್ಲಿ ಮಾಡುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ರಾಜ್ಯಕ್ಕೆ ಬಹುಬೇಡಿಕೆಯ ವಾಲಿಬಾಲ್ ಆಟಗಾರ್ತಿಯಾಗಿ ಜನಮನ್ನಣೆಗಳಿಸಿದ್ದರು. ಅವರ ಸಾಧನೆಯ ಹಿಂದೆ ತರಬೇತುದಾರರಾದ ಉಜಿರೆ ಎಸ್.ಡಿ.ಎಂ. ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಅವರ ಶ್ರಮ ಅಪಾರವಿದೆ.

ರಾಷ್ಟ್ರದ ವಾಲಿಬಾಲ್‌ನಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಷನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್ ನಲ್ಲಿ ತೃತೀಯ ಸ್ಥಾನ ಗಳಿಸಿರುವುದು ಇವರ ಸಾಧನೆಯ ಹಾದಿಯಾಗಿದೆ. ಅವರ ಸಾಧನೆಯನ್ನು ಮೆಚ್ಚಿ ಧರ್ಮಸ್ಥಳ ಧರ್ಮಾಧಿಕಾರಿ, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗqಯವರು ಪ್ರಶಂಸಿ ಗೌರವಿಸಿದ್ದರು. ಮೃತರು ತಂದೆ, ತಾಯಿ, ಪತಿಯನ್ನು ಅಗಲಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.